ಮಂಗಳೂರು: ನಗರದ ಪಚ್ಚನಾಡಿಯಲ್ಲಿನ ಘನತ್ಯಾಜ್ಯ ಘಟಕದಲ್ಲಿ ಬಹುಕಾಲದಿಂದ ಸಂಗ್ರಹವಾಗಿರುವ “ಘನ ತ್ಯಾಜ್ಯ’ವನ್ನು ತೆರವುಗೊಳಿಸುವ ನಿಟ್ಟಿನಲ್ಲಿ ನಡೆಸುವ ಟೆಂಡರ್ ಪ್ರಕ್ರಿಯೆಯನ್ನು ಅಂತಿಮಗೊಳಿಸಲಾಗಿದೆ ಎಂದು ಮಂಗಳೂರು ಮಹಾನಗರ ಪಾಲಿಕೆ ಹೈಕೋರ್ಟ್‌ಗೆ ತಿಳಿಸಿದೆ.

ಪಚ್ಚನಾಡಿ ಘನತ್ಯಾಜ್ಯ ಭೂಭರ್ತಿ ಘಟಕ ದಿಂದ ಆಗಿರುವ ಅನಾಹುತದ ಬಗ್ಗೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಪಾಲಿಕೆ ಈ ವಿಷಯ ತಿಳಿಸಿತು.
ಮಂಗಳೂರು ಮಹಾನಗರ ಪಾಲಿಕೆ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಧ್ಯಾನ್ ಚಿನ್ನಪ್ಪ, ಘನತ್ಯಾಜ್ಯ ತೆರವು ಹಾಗೂ ನಿರ್ವಹಣೆಗೆ ಸಂಬಂಧಿಸಿದಂತೆ ಟೆಂಡರ್ ಅಂತಿಮಗೊಳಿಸಲಾಗಿದ್ದು, ಗುತ್ತಿಗೆದಾರರು ಗುರುತಿಸಲಾಗಿದೆ. ಟೆಂಡರ್ ಮೊತ್ತ 50 ಕೋ. ರೂ.ಗಳಿಗೂ ಅಧಿಕವಾಗಿದ್ದರೆ ಆರ್ಥಿಕ ಇಲಾಖೆಯ ಸಹಮತಿ ಪಡೆದುಕೊಳ್ಳಬೇಕು. ಅದಕ್ಕಾಗಿ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಯ ಟೆಂಡರ್ ಪರಿಶೀಲನ ಸಮಿತಿಗೆ ಸಲ್ಲಿಸಲಾಗಿದೆ. ಒಪ್ಪಿಗೆ ಸಿಕ್ಕ ತತ್‌ಕ್ಷಣ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ಮಂಗಳೂರು ಮಹಾನಗರ ಪಾಲಿಕೆ ಪರ ವಾದ ಪರಿಗಣಿಸಿದ ನ್ಯಾಯಪೀಠ, ಒಂದೊಮ್ಮೆ ನಿಗದಿತ ಸಮಯದಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿ ಆರಂಭಿಸದಿದ್ದರೆ ಮುಂದಿನ ವಿಚಾರಣೆ ವೇಳೆ ಪಾಲಿಕೆ ಆಯುಕ್ತರು ಖುದ್ದು ಹಾಜರಾಗಬೇಕು ಎಂದು ತಾಕೀತು ಮಾಡಿ ವಿಚಾರಣೆಯನ್ನು ಫೆ.10ಕ್ಕೆ ಮುಂದೂಡಿತು.