ಬೆಂಗಳೂರು: ರಾಜ್ಯದಲ್ಲಿ ಮತ್ತೆ ನಿಧಾನಗತಿಯಲ್ಲಿ ಕೋವಿಡ್ ಸೋಂಕಿನ ಜೊತೆಗೆ ಓಮೈಕ್ರಾನ್ ಕೂಡ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ನೈಟ್ ಕರ್ಫ್ಯೂ ಸೇರಿದಂತೆ ಕೆಲವು ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಲು ಸರ್ಕಾರ ಮುಂದಾಗಿದೆ.

ಇದೀಗ ರಾಜ್ಯದಲ್ಲೂ ನಿನ್ನೆ 400ಕ್ಕೂ ಹೆಚ್ಚು ಕೋವಿಡ್ ಸೋಂಕು ಪ್ರಕರಣಗಳು ಜೊತೆಗೆ ಓಮೈಕ್ರಾನ್ ಹೆಚ್ಚಾಗುತ್ತಿರುವ ಕಾರಣ ಈಗಿರುವ ನಿಬಂಧನೆಗಳ ಜೊತೆಗೆ ಬಿಗಿಯಾದ ಕ್ರಮಗಳನ್ನು ಜಾರಿಗೊಳಿಸಲು ತೀರ್ಮಾನಿಸಿದೆ.ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜೊತೆ ಮಹತ್ವದ ಸಭೆ ನಡೆಸಲಿದ್ದು, ನಂತರ ರಾಜ್ಯ ಸರ್ಕಾರ ತನ್ನ ನಿಲುವನ್ನು ಪ್ರಕಟಿಸಲಿದೆ ಎಂದು ಗೊತ್ತಾಗಿದೆ.
ಹುಬ್ಬಳ್ಳಿಯಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಬೊಮ್ಮಾಯಿ ನಾಳೆ ಬೆಂಗಳೂರಿಗೆ ಹಿಂತಿರುಗಿದ ತಕ್ಷಣ ತಾಂತ್ರಿಕ ಸಲಹಾ ಸಮಿತಿ ಜೊತೆ ಸಭೆ ನಡೆಸಲಾಗುವುದು. ತಜ್ಞರು ನೀಡುವ ಶಿಫಾರಸ್ಸು ಗಳ ಆಧಾರದ ಮೇಲೆ ಸರ್ಕಾರ ಮುಂದಿನ ಕ್ರಮ ತೆಗೆದುಕೊಳ್ಳಲಿದೆ ಎಂದು ಹೇಳಿದರು.